ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಪೋಸ್ಟರ್ ಬಿಡುಗಡೆ

News Image



ಕೊಪ್ಪಳ : ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಕಲ್ಪಿಸುವ ಉದ್ದೇಶದಿಂದ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (RSETI) ಕುರಿತ ಮಾಹಿತಿ, ಕಲಿಕೆ ಮತ್ತು ಸಂವಹನ (IEC) ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.

ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೌಶಲ್ಯ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ಅವರು ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದರು.

ಗ್ರಾಮೀಣ ಪ್ರದೇಶದ ಯುವಜನರಿಗೆ ವಿವಿಧ ವೃತ್ತಿಪರ ಕೌಶಲ್ಯ ತರಬೇತಿ ನೀಡಿ, ಸ್ವಂತ ಉದ್ಯೋಗ ಆರಂಭಿಸಲು ಪ್ರೋತ್ಸಾಹಿಸುವುದು ಹಾಗೂ ಉದ್ಯಮಶೀಲತೆಯನ್ನು ಬೆಳೆಸುವುದು RSETI ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ. ಯುವಕರು ತರಬೇತಿಯ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಎಂಬ ಆಶಯವನ್ನು ಈ ಅಭಿಯಾನ ಹೊಂದಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಮಾರುತಿ ಕೆ., ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಐಟಿಐ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

**ವರದಿ: ನಮ್ಮೂರು ನ್ಯೂಸ್, ಕೊಪ್ಪಳ**